ಇಬ್ಬರು ಮಂಗಳಮುಖಿಯರ ಬಂಧನ
ಚಿತ್ರದುರ್ಗ: 25 ವರ್ಷದ ಯುವಕನನ್ನು ಅಪಹರಿಸಿ, ಆತನ ಇಚ್ಛೆಗೆ ವಿರುದ್ಧವಾಗಿ ಗುಪ್ತಾಂಗದ ಶಸ್ತ್ರಚಿಕಿತ್ಸೆ ಮಾಡಿಸಿದ ಆರೋಪದ ಮೇಲೆ ಇಬ್ಬರು ಮಂಗಳಮುಖಿಯರನ್ನು ಚಿತ್ರದುರ್ಗ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅನುಷ್ಕಾ ಹಾಗೂ ನಳಿನಾ ಬಂಧಿತ ಆರೋಪಿಗಳು. ಚಳ್ಳಕೆರೆ ಗೇಟ್ ಬಳಿ ಸುತ್ತಾಡುತ್ತಿದ್ದ ವೇಳೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗದಲ್ಲಿ ಹೂವು ಮಾರಾಟ ಮಾಡುತ್ತಿದ್ದ ಯುವಕನಿಗೆ ಹೂವು ನೀಡುವ ಸಂದರ್ಭ ಇಬ್ಬರು ಮಂಗಳಮುಖಿಯರ ಪರಿಚಯವಾಗಿತ್ತು ಎನ್ನಲಾಗಿದೆ. ಬಳಿಕ ಯುವಕನನ್ನು ಅಪಹರಿಸಿ ಶಸ್ತ್ರಚಿಕಿತ್ಸೆ ಮಾಡಿಸಿದ ಆರೋಪ ಕೇಳಿಬಂದಿದೆ.
ಅಷ್ಟೇ ಅಲ್ಲದೆ, ಯುವಕನ ತೊಡೆಗಳ ಮೇಲೆ ಬಿಸಿನೀರು ಹಾಗೂ ಕೆಂಡದಿಂದ ಸುಟ್ಟು ಹಿಂಸೆ ನೀಡಿದ ಆರೋಪವೂ ಕೇಳಿಬಂದಿದೆ. ಸದ್ಯ ಯುವಕ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ಈ ಸಂಬಂಧ ಯುವಕನ ತಂದೆ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು, ಇದೀಗ ಚಿತ್ರದುರ್ಗ ನಗರ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಯುವಕನ ಅಪಹರಣ, ಶಸ್ತ್ರಚಿಕಿತ್ಸೆ ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

