KRGRV
Wednesday, October 14, 2026
Homeಬೆಂಗಳೂರುಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಮೂಲಭೂತ ಹಕ್ಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಮೂಲಭೂತ ಹಕ್ಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು ಪೊಲೀಸರ ನಿನ್ನೆಗಿನ ಪ್ರತಿಭಟನೆ ನಿರ್ವಹಣೆ ಕುರಿತು ಪರಿಶೀಲನೆಗೆ ಸೂಚನೆ

ಬೆಂಗಳೂರು: ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ಈ ಹಕ್ಕನ್ನು ಗೌರವಿಸಬೇಕು, ರಕ್ಷಿಸಬೇಕು ಹಾಗೂ ಯಾವುದೇ ಸಂದರ್ಭದಲ್ಲೂ ಹತ್ತಿಕ್ಕಬಾರದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರು ಪೊಲೀಸರು ನಿನ್ನೆ ಪ್ರತಿಭಟನಾಕಾರರನ್ನು ನಿರ್ವಹಿಸಿದ ರೀತಿಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ತಿಳಿಸಿದ್ದಾರೆ.

“ಶಾಂತಿಯುತ ಪ್ರತಿಭಟನೆ ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಹಕ್ಕು. ಅದನ್ನು ಗೌರವಿಸುವುದು ಮತ್ತು ರಕ್ಷಿಸುವುದು ನಮ್ಮ ಜವಾಬ್ದಾರಿ. ಯಾವುದೇ ಶಾಂತಿಯುತ ಪ್ರತಿಭಟನೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪ್ರತಿಭಟನಾಕಾರರು ಕೂಡ ಪೊಲೀಸರೊಂದಿಗೆ ಸಹಕರಿಸಬೇಕು. ತಮ್ಮ ಪ್ರತಿಭಟನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಂಚಿತವಾಗಿ ಮಾಹಿತಿ ನೀಡುವ ಮೂಲಕ ತಮ್ಮ ಸುರಕ್ಷತೆ ಹಾಗೂ ಇತರ ನಾಗರಿಕರ ಹಕ್ಕುಗಳ ರಕ್ಷಣೆಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

“ಪೊಲೀಸರು ನಿಮ್ಮ ಹಕ್ಕುಗಳನ್ನು ರಕ್ಷಿಸಲು ಇದ್ದಾರೆ, ನಿಮ್ಮ ಧ್ವನಿಯನ್ನು ತಡೆಯಲು ಅಲ್ಲ” ಎಂದು ಗೃಹ ಸಚಿವರು ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮಾತ್ರ ಪೊಲೀಸರ ಕರ್ತವ್ಯವಲ್ಲ. ಪ್ರತಿಯೊಬ್ಬ ನಾಗರಿಕನು ತನ್ನ ಅಭಿಪ್ರಾಯವನ್ನು ಸ್ವತಂತ್ರವಾಗಿ, ಶಾಂತಿಯುತವಾಗಿ ಮತ್ತು ಯಾವುದೇ ಭಯವಿಲ್ಲದೆ ವ್ಯಕ್ತಪಡಿಸಲು ಅಗತ್ಯವಾದ ವಾತಾವರಣ ನಿರ್ಮಿಸುವುದು ಕೂಡ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಕಾನೂನು ಮತ್ತು ಸುವ್ಯವಸ್ಥೆಗೆ ಬೆದರಿಕೆ ಅಲ್ಲ. ಬದಲಾಗಿ, ಅಂತಹ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ರಕ್ಷಿಸುವುದೇ ಕಾನೂನು ಮತ್ತು ಸುವ್ಯವಸ್ಥೆಯ ನಿಜವಾದ ಉದ್ದೇಶವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಹೆಚ್ಚಿನ ಸುದ್ದಿ