ಬೆಂಗಳೂರು, ಅ.14: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGS) ಅಡಿಯಲ್ಲಿ ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 2.5 ಲಕ್ಷ ಮಾನವದಿನಗಳು ಸೃಷ್ಟಿಯಾಗುತ್ತಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 86,042 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಜುಲೈ 1ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 2,04,81,000 ಮಾನವದಿನಗಳು ಸೃಷ್ಟಿಯಾಗಿವೆ. ಇದರಲ್ಲಿ ಪರಿಶಿಷ್ಟ ಜಾತಿಯವರ 39,97,794, ಪರಿಶಿಷ್ಟ ಪಂಗಡದವರ 29,62,407 ಹಾಗೂ ಮಹಿಳೆಯರ 1,12,10,381 ಮಾನವದಿನಗಳು ಸೇರಿವೆ.
ಯೋಜನೆಯಡಿ ಪರಿಶಿಷ್ಟ ಜಾತಿಯ 1,95,871 ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿದ್ದು, 3,02,153 ಕಾರ್ಮಿಕರು ಕೆಲಸ ನಿರ್ವಹಿಸಿದ್ದಾರೆ. ಅದೇ ರೀತಿ 1,41,449 ಪರಿಶಿಷ್ಟ ಪಂಗಡದ ಕುಟುಂಬಗಳ 2,28,200 ಅಕುಶಲ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲಾಗಿದೆ. ಒಟ್ಟಾರೆ ಯೋಜನೆಯಡಿ 8,57,158 ಮಹಿಳಾ ಕಾರ್ಮಿಕರು ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆರಂಭಿಸಲಾದ 86,042 ಕಾಮಗಾರಿಗಳ ಪೈಕಿ 497 ಕಾಮಗಾರಿಗಳು ಪೂರ್ಣಗೊಂಡಿದ್ದು, 85,048 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಖಂಡ್ರೆ ಮಾಹಿತಿ ನೀಡಿದ್ದಾರೆ.

