KRGRV
Sunday, October 4, 2026
Homeಜಿಲ್ಲಾ ಸುದ್ದಿಗಳುಸೊರಬದಲ್ಲಿ ಪ್ರಜಾಸೇವೆ ಆಂದೋಲನ ಸಭೆ; 278 ಅರ್ಜಿದಾರರ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ

ಸೊರಬದಲ್ಲಿ ಪ್ರಜಾಸೇವೆ ಆಂದೋಲನ ಸಭೆ; 278 ಅರ್ಜಿದಾರರ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ

  • ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ

ಸೊರಬ, ಅ.3: “ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ” ಎಂಬ ಧ್ಯೇಯದೊಂದಿಗೆ ಪ್ರಜಾಸೇವಾ ಇಲಾಖೆಯು ಇಲ್ಲಿಯ ರಾಜ್ ಕಲಾಕ್ಷೇತ್ರ ರಂಗಮಂದಿರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ʻಪ್ರಜಾಸೇವೆ ಆಂದೋಲನ ಸಭೆʼ ಯು ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರೂ ಆದ ಶ್ರೀ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರು ಖುದ್ದಾಗಿ 278 ಅರ್ಜಿದಾರರ ಅಹವಾಲುಗಳನ್ನು ಆಲಿಸಿದರು.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವೇದಿಕೆಯಲ್ಲೇ ಕುಳಿತ ಸಚಿವರು, ಜನರ ಸಮಸ್ಯೆಗಳನ್ನು ಒಂದೊಂದಾಗಿ ಆಲಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದರು. ಉಳಿದ ಅರ್ಜಿಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 5ರಂದು ಕೂಡ್ಲಿಗಿಯಲ್ಲಿ ರಾಜ್ಯಮಟ್ಟದ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಿದ್ದರು. ಬಳಿಕ ಸೆಪ್ಟೆಂಬರ್ 8ರಂದು ಶಿಕಾರಿಪುರದಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದ್ದರು. ಇದೀಗ ಸೊರಬದಲ್ಲಿ ತಾಲ್ಲೂಕು ಮಟ್ಟದ ಸಭೆ ನಡೆಸುವ ಮೂಲಕ ಸರ್ಕಾರವನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶಕ್ಕೆ ಮತ್ತಷ್ಟು ವೇಗ ನೀಡಲಾಗಿದೆ.

ಜನರ ಬಳಿಗೆ ಸರ್ಕಾರ ತರುವುದೇ ಪ್ರಜಾಸೇವೆಯ ಉದ್ದೇಶ

ಬೆಳಗ್ಗೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, “ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದರು. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಜಾಸೇವೆ ಆಂದೋಲನವನ್ನು ಆರಂಭಿಸಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಇಲಾಖೆಯನ್ನೇ ಸೃಜಿಸಲಾಗಿದೆ. ಸರ್ಕಾರವನ್ನು ಜನರ ಬಳಿಗೆ ಕೊಂಡೊಯ್ಯುವುದೇ ಇದರ ಪ್ರಮುಖ ಉದ್ದೇಶ” ಎಂದರು.

ಪ್ರಜಾಸೇವೆ ಆಂದೋಲನ ನಿರಂತರವಾಗಿ ನಡೆಯಬೇಕು ಎಂಬುದು ಮುಖ್ಯಮಂತ್ರಿಗಳ ಆಶಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೊದಲ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಶಿಕಾರಿಪುರದಲ್ಲಿ ನಡೆಸಿದ್ದೇನೆ. ಇದೀಗ ನನ್ನ ಕ್ಷೇತ್ರವಾದ ಸೊರಬದಲ್ಲಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಸಿ, ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಲಿದ್ದೇನೆ ಎಂದು ಹೇಳಿದರು.

278 ಅರ್ಜಿಗಳ ಸ್ವೀಕಾರ

ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 278 ಅರ್ಜಿಗಳು ಸ್ವೀಕೃತವಾಗಿದ್ದು, ಸಚಿವರು ಅವುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಗಾಯಿಸಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆಯೇ ಹೆಚ್ಚಿನ ಅರ್ಜಿ ಸಲ್ಲಿಕೆಯಾಗಿದೆ. ಒಟ್ಟು 121 ಅರ್ಜಿಗಳು ಬಂದಿವೆ ಎಂದು ಸಚಿವರು ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ 48 ಅರ್ಜಿಗಳು ಸಲ್ಲಿಕೆಯಾಗಿವೆ.

ಅಧಿಕಾರಿಗಳಿಗೆ ತ್ವರಿತ ಕ್ರಮಕ್ಕೆ ಸೂಚನೆ

ಸೊರಬ ಕ್ಷೇತ್ರದ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರು, ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸಾರ್ವಜನಿಕರ ಸಮಸ್ಯೆಗಳು ಹಾಗೂ ಅವುಗಳ ಪರಿಹಾರಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸೊರಬ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಸರ್ಕಾರದ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ