ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗೌಡೂರು ಗ್ರಾಮದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ರೈತ ಬೆಳೆದಿದ್ದ ಹತ್ತಿ ಬೆಳೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗೌಡೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ. ರೈತ ಮಾಳಮ್ಮ ಗಂಡ ಹನುಮಂತ ಪೂಜಾರಿ ಅವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು ಶೆಡ್ ನಲ್ಲಿ ಶೇಖರಣೆ ಮಾಡಿದ್ದರು.
ಶೆಡ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹತ್ತಿ ಬೆಳೆಗೆ ಬೆಂಕಿ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಬಕೆಟ್, ಕೊಡದಲ್ಲಿ ನೀರು ತಂದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಆದರೂ ಬೆಂಕಿಯ ಕೆನ್ನಾಲಗೆ ರೈತ ಬೆಳೆದಿದ್ದ ಸಂಪೂರ್ಣ ಹತ್ತಿ ಬೆಳೆ ಸುಟ್ಟು ಭಸ್ಮವಾಗಿದೆ. ಇದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಈ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೈತ ಮಾಳಮ್ಮ ಅವರು ಸರ್ಕಾರದಿಂದ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ., …… ಜಿಲ್ಲಾ ವರದಿಗಾರರು : ಶಿವು ರಾಠೋಡ.

