KRGRV
Wednesday, October 28, 2026
Homeಜಿಲ್ಲಾ ಸುದ್ದಿಗಳುರಸ್ತೆ ಕಾಮಗಾರಿ ವಿಳಂಬ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ಮುದ್ದೇಬಿಹಾಳ:
ತಾಲೂಕಿನ ಹಿರೇಮುರಾಳ ಕ್ರಾಸ್‌ನಿಂದ ಹುನಕುಂಟಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದು ಹಾಗೂ ಆಲೂರ ಗ್ರಾಮದಿಂದ ನಾಲತವಾಡಕ್ಕೆ ಸಂಪರ್ಕಿಸುವ ರಸ್ತೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭಿಸದಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಕುರಿತು ಇಲಾಖೆಗೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದ ಸಂಘಟನೆಗಳ ಪದಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಇಲಾಖೆಯ ಕಚೇರಿ ಎದುರು ಜಮಾಯಿಸಿ, ರಸ್ತೆ ಕಾಮಗಾರಿಗಳ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಪ್ರಮುಖ ಶೇಖರ ಆಲೂರ, ಹಿರೇಮುರಾಳ ಕ್ರಾಸ್‌ನಿಂದ ಹುನಕುಂಟಿ ಗ್ರಾಮದವರೆಗಿನ ರಸ್ತೆ ಕಾಮಗಾರಿಯನ್ನು ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ತಮ್ಮ ನಂತರ ಇದೇ ಭಾಗದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿದ್ದ ಇತರ ಗುತ್ತಿಗೆದಾರರು ಕಾಮಗಾರಿಯನ್ನು ಪೂರ್ಣಗೊಳಿಸಿದ್ದಾರೆ. ಆದರೆ ಸಿ.ಬಿ. ಅಸ್ಕಿ ಎಂಬ ಗುತ್ತಿಗೆದಾರರು ಮಾತ್ರ ತಾವು ಪಡೆದಿರುವ ಕಾಮಗಾರಿಯನ್ನು ಪೂರ್ಣಗೊಳಿಸದೆ ವಿಳಂಬ ಮಾಡುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದರು.
ರಸ್ತೆ ಕಾಮಗಾರಿ ವಿಳಂಬದ ಕುರಿತು ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಇಂತಹ ಬೇಜವಾಬ್ದಾರಿ ಗುತ್ತಿಗೆದಾರರಿಗೆ ಏಕೆ ರಕ್ಷಣೆ ನೀಡಲಾಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಈ ವಿಚಾರ ಜನಪ್ರತಿನಿಧಿಗಳ ಗಮನಕ್ಕೂ ಬಂದಿದ್ದರೂ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.
ಅಧಿಕಾರಿ ರೆಡ್ಡಿ ಅವರಿಂದ ಸಂಧಾನ:
ಪ್ರತಿಭಟನಾ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿ ಎ.ಬಿ. ರೆಡ್ಡಿ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಈಗಾಗಲೇ ಸಂಬಂಧಿಸಿದ ಗುತ್ತಿಗೆದಾರರಿಗೆ ನೋಟಿಸ್‌ ನೀಡಲಾಗಿದ್ದು, ಮುಂದಿನ 15 ದಿನಗಳಲ್ಲಿ ರಸ್ತೆ ಕಾಮಗಾರಿಯನ್ನು ಆರಂಭಿಸಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಇಲಾಖೆಗೆ ಲಿಖಿತವಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಅಲ್ಲಿಯವರೆಗೆ ಗ್ರಾಮಸ್ಥರಿಗೆ ತೊಂದರೆಯಾಗದಂತೆ ರಸ್ತೆಗೆ ನೀರು ಹಾಕಿ ಧೂಳು ಏಳದಂತೆ ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ಪ್ರತಿಭಟನೆಯನ್ನು ಕೈಬಿಡುವಂತೆ ಅವರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರರು, 15 ದಿನಗಳೊಳಗೆ ಕಾಮಗಾರಿ ಆರಂಭವಾಗದಿದ್ದರೆ ತಾಲೂಕಿನ ಪ್ರತಿಯೊಂದು ಗ್ರಾಮದಿಂದಲೂ ಜನರನ್ನು ಕರೆತಂದು ಲೋಕೋಪಯೋಗಿ ಇಲಾಖೆ ಎದುರು ಮತ್ತಷ್ಟು ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಹೋರಾಟಗಾರ ಸಂಗಯ್ಯ ಸಾರಂಗಮಠ, ಶಿವು ಕನ್ನೊಳ್ಳಿ ಸೇರಿದಂತೆ ವಿವಿಧ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ