ಸಂತಾಪ ಸಂದೇಶದಲ್ಲಿ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಿವಾನಂದ ಕೌಜಲಗಿ ಅವರು ಲೋಕೋಪಯೋಗಿ ಇಲಾಖೆಯ ಸಚಿವರಾಗಿ ಹಾಗೂ 1996ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದ ಅವರು, ಸಾರ್ವಜನಿಕ ಜೀವನದಲ್ಲಿಯೂ ಮುತ್ಸದ್ದಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಅವರ ಸೇವೆ ಸಮಾಜಕ್ಕೆ ಸದಾ ಸ್ಮರಣೀಯವಾಗಿರಲಿದೆ ಎಂದು ಖಂಡ್ರೆ ತಿಳಿಸಿದ್ದಾರೆ.
ಶಿವಾನಂದ ಕೌಜಲಗಿ ಅವರ ನಿಧನದಿಂದ ರಾಜ್ಯವು ಅನುಭವಿ ರಾಜಕಾರಣಿ, ಶಿಕ್ಷಣಪ್ರೇಮಿ ಹಾಗೂ ಉತ್ತಮ ಮಾರ್ಗದರ್ಶಕರನ್ನು ಕಳೆದುಕೊಂಡಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ದೇವರು ಶಿವಾನಂದ ಕೌಜಲಗಿ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

