ಬೆಂಗಳೂರು, ನ. 4: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಫಲಾನುಭವಿ ಆಧಾರಿತ ಯೋಜನೆಗಳನ್ನು ಒಂದೇ ರೀತಿಯ ಏಕರೂಪದ ಬ್ರ್ಯಾಂಡಿಂಗ್ ಮೂಲಕ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಹಾಗೂ ಸರ್ಕಾರದ ಕಲ್ಯಾಣ ಯೋಜನೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಧಾನಸೌಧದಲ್ಲಿ ಗುರುವಾರ ಮಹತ್ವದ ಸಭೆ ನಡೆಯಿತು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿವಿಧ ಇಲಾಖೆಗಳು ಪ್ರತ್ಯೇಕವಾಗಿ ಬಳಸುತ್ತಿರುವ ಮಾಹಿತಿ ಪ್ರಸಾರದ ವಿಧಾನಗಳನ್ನು ಸಮನ್ವಯಗೊಳಿಸಿ ಸರ್ಕಾರದ ಯೋಜನೆಗಳನ್ನು ಒಂದೇ ಗುರುತಿನಡಿ ಜನರಿಗೆ ತಲುಪಿಸುವ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳು ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಪರಿಣಾಮಕಾರಿ ಮಾಹಿತಿ ಪ್ರಸಾರ ವ್ಯವಸ್ಥೆ ರೂಪಿಸುವುದು, ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಹೆಚ್ಚಿಸುವುದು, ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದು ಹಾಗೂ ಯೋಜನೆಗಳ ಪ್ರಚಾರಕ್ಕೆ ಏಕರೂಪದ ದೃಶ್ಯ ಗುರುತು (ಬ್ರ್ಯಾಂಡಿಂಗ್) ಮತ್ತು ಮಾಹಿತಿ ವಿನ್ಯಾಸವನ್ನು ರೂಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಯೋಜನೆಗಳ ಮಾಹಿತಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಜನರಿಗೆ ಸುಲಭವಾಗಿ ತಲುಪುವಂತೆ ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣಗಳು, ಮುದ್ರಣ ಮಾಧ್ಯಮ, ಸಾರ್ವಜನಿಕ ಜಾಗೃತಿ ಅಭಿಯಾನಗಳು ಸೇರಿದಂತೆ ವಿವಿಧ ಸಂವಹನ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಗತ್ಯದ ಕುರಿತು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಇದಲ್ಲದೆ, ವಿವಿಧ ಇಲಾಖೆಗಳ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಒಂದೇ ರೀತಿಯ ಮಾಹಿತಿ ಒದಗಿಸುವುದು, ಸರ್ಕಾರದ ಬ್ರ್ಯಾಂಡ್ ಗುರುತನ್ನು ಬಲಪಡಿಸುವುದು ಹಾಗೂ ಫಲಾನುಭವಿಗಳಿಗೆ ಯೋಜನೆಗಳ ಲಭ್ಯತೆ ಮತ್ತು ಅರ್ಹತೆ ಕುರಿತು ಸ್ಪಷ್ಟ ಮಾಹಿತಿ ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಪ್ರಜಾ ಸೇವಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಸರ್ಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮಾಹಿತಿ ಪ್ರಸಾರದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

