ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಬೆಳೆದು ನಿಂತಿರುವ ಬೆಳೆಗಳನ್ನು ಸಂರಕ್ಷಿಸಲು ತುಂಗಭದ್ರಾ ಜಲಾಶಯದ ನೀರಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ರೈತರ ಹಿತದೃಷ್ಟಿಯಿಂದ ಅಗತ್ಯ ನೀರು ಬಳಸಿಕೊಳ್ಳಲು ಅನುಮತಿ ನೀಡುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಮನವಿ ಮಾಡಿದ್ದಾರೆ.
ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರೊಂದಿಗೆ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಸನಗೌಡ ಬಾದರ್ಲಿ ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದರು.
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳನ್ನು ಬೆಳೆದಿದ್ದು, ಪ್ರಸ್ತುತ ಬೆಳೆಗಳ ರಕ್ಷಣೆಗೆ ನೀರಿನ ಅಗತ್ಯತೆ ಹೆಚ್ಚಾಗಿದೆ. ನೀರಿನ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಂಧ್ರಪ್ರದೇಶದೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಶೀಘ್ರ ಕ್ರಮ ಕೈಗೊಂಡರೆ ಬೆಳೆ ನಷ್ಟ ತಪ್ಪಿಸಲು ಸಹಕಾರಿಯಾಗಲಿದೆ ಎಂದು ಬಸನಗೌಡ ಬಾದರ್ಲಿ ತಿಳಿಸಿದರು.

