ಬೆಂಗಳೂರು, ಆಗಸ್ಟ್ 18: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆಗಸ್ಟ್ 21 ರಿಂದ ಸೆಪ್ಟೆಂಬರ್ 2ರ ವರೆಗೆ ನಡೆಸುವ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ (BMTC) ಉಚಿತ ಪ್ರಯಾಣದ ಅವಕಾಶ ನೀಡುತ್ತಿದೆ. ಕೆಎಸ್ ಆರ್ ಟಿಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಹೇಳಿದ ಬೆನ್ನಲ್ಲೇ ಬಿಎಂಟಿಸಿ ಈ ನಿರ್ಧಾರ ಕೈಗೊಂಡಿದೆ.
ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಸಹಕಾರಕ್ಕಾಗಿ ಉಚಿತ ಸಾರಿಗೆ ಸೇವೆ ನೀಡಲಾಗುತ್ತಿದೆ. ವಿದ್ಯಾರ್ಥಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೂ ಉಚಿತ ಸಾರಿಗೆ ಸೇವೆ ನೀಡಲಾಗುತ್ತದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನ ತೋರಿಸಿ ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಇದು ಸಾಮಾನ್ಯ ಬಿಎಂಟಿಸಿ ಬಸ್ಗಳಲ್ಲಿ ಮಾತ್ರ ಅನ್ವಯವಾಗುತ್ತದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ.
ಇತ್ತೀಚೆಗೆ, ಕೆಎಸ್ಆರ್ಟಿಸಿ ಕೂಡ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಪ್ರಕಟಣೆ ಹೊರಡಿಸಿತ್ತು. ಪರೀಕ್ಷಾ ಪ್ರವೇಶಪತ್ರ ತೋರಿಸಿ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ನಿಗಮದ ನಗರ ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿದೆ.
ಸಿಬಿಎಸ್ಇ 12ನೇ ತರಗತಿ ಪೂರಕ ಪರೀಕ್ಷೆಯು ಜುಲೈ 27 ರಂದು ನಡೆದಿದ್ದು, ಆಗಸ್ಟ್ 01 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಂಡಿತ್ತು. 2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರ ವಿರೋಧದ ನಡುವೆಯೂ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ.