ಶಿವಮೊಗ್ಗ, ನ.3: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರ ಸೂಚನೆಯ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊನ್ನೆಸರ ಗ್ರಾಮದ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ.
ಅ.25ರಂದು ನಡೆದ ಶಿವಮೊಗ್ಗ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಒತ್ತುವರಿ ತೆರವುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಸರ ಗ್ರಾಮದ ಸ.ನಂ.53ರ ವಿರೂಪಾಕ್ಷನ ಕೆರೆಯ ಒತ್ತುವರಿ ತೆರವು ಮಾಡಲಾಗಿದೆ.
2022ರಿಂದ ನಿರಂತರ ಹೋರಾಟ ನಡೆಸುತ್ತಿದ್ದ ಗ್ರಾಮಸ್ಥರು, ಕೆರೆಯ ತೂಬು ಒಡೆದು ಒತ್ತುವರಿ ಮಾಡಿರುವ ಕುರಿತು ಸಚಿವ ಈಶ್ವರ ಖಂಡ್ರೆ ಅವರಿಗೆ ದೂರು ನೀಡಿ, ಕೆರೆ ಪ್ರದೇಶವನ್ನು ಪುನಃ ತೆರವುಗೊಳಿಸುವಂತೆ ಮನವಿ ಮಾಡಿದ್ದರು.
ದೂರುಗೆ ತಕ್ಷಣ ಸ್ಪಂದಿಸಿದ ಸಚಿವರು, ಸೆಪ್ಟೆಂಬರ್ 29ರಂದು ಇಲಾಖೆಯ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಕೆರೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಈ ವಿಷಯ ಪ್ರಸ್ತಾಪಿಸಿದ ಈಶ್ವರ ಖಂಡ್ರೆ, “ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ, ಯಾವುದೇ ಒತ್ತಡಕ್ಕೆ ಮಣಿಯದೆ ಕೆರೆ ಒತ್ತುವರಿ ತೆರವುಗೊಳಿಸಬೇಕು. ಕೆರೆಗಳನ್ನು ಉಳಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚುವುದಲ್ಲದೆ, ಪರಿಸರ ಸಮತೋಲನ ಕಾಪಾಡಲು ಹಾಗೂ ಭವಿಷ್ಯದ ಪೀಳಿಗೆಗೆ ಅನುಕೂಲವಾಗಲಿದೆ” ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು.
ಸಚಿವರ ಸೂಚನೆಯಂತೆ ಕಾರ್ಯಪ್ರವೃತ್ತರಾದ ಹೆಗ್ಗೋಡು ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸರ್ವೆ ನಡೆಸಿ 2 ಎಕರೆ 11 ಗುಂಟೆ ವಿಸ್ತೀರ್ಣದ ಕೆರೆಯಲ್ಲಿ ಒತ್ತುವರಿಯಾಗಿದ್ದ 16 ಗುಂಟೆ ಪ್ರದೇಶವನ್ನು ಗುರುತಿಸಿದ್ದಾರೆ. ಬಳಿಕ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಒತ್ತುವರಿ ತೆರವುಗೊಳಿಸಿದ್ದಾರೆ.

