KRGRV
Monday, October 19, 2026
Homeಜಿಲ್ಲಾ ಸುದ್ದಿಗಳುಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ: ಕಬ್ಬು ಬೆಳೆಗಾರರ ಧರಣಿ ತಾತ್ಕಾಲಿಕ ಹಿಂಪಡೆತಟನ್ ಕಬ್ಬಿಗೆ ₹5,500...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ: ಕಬ್ಬು ಬೆಳೆಗಾರರ ಧರಣಿ ತಾತ್ಕಾಲಿಕ ಹಿಂಪಡೆತಟನ್ ಕಬ್ಬಿಗೆ ₹5,500 ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಮುದ್ದೇಬಿಹಾಳ: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಧರಣಿ ಸತ್ಯಾಗ್ರಹವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಭರವಸೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದ್ದಾರೆ.
ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆಯ ಕುರಿತು ಮಾತನಾಡಿದ ಅವರು, ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತಿದೆ.

ಭಾನುವಾರ ರಾತ್ರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ, ರೈತರ ಬೇಡಿಕೆಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿ ಕಾಲಾವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ರೈತ ಮುಖಂಡರೊಂದಿಗೆ ಸಮಾಲೋಚಿಸಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ನಿರ್ಧರಿಸಲಾಗಿದೆ ಎಂದರು.

ರೈತರ ಪ್ರಮುಖ ಬೇಡಿಕೆಗಳು:
ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಬೇಕು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆ.ಜಿ.ಗೆ ₹31ರಿಂದ ₹60ಕ್ಕೆ ಹೆಚ್ಚಿಸಬೇಕು. ರಾಜ್ಯ ಸರ್ಕಾರದಿಂದ ಪ್ರತಿ ಟನ್ ಕಬ್ಬಿಗೆ ₹1,000 ಹೆಚ್ಚುವರಿ ಬೆಂಬಲ ಬೆಲೆ ನೀಡಬೇಕು. ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೆನಾಲ್‌ಗೆ ಶೇ.100ರಷ್ಟು ಖರೀದಿ ಅವಕಾಶ ಕಲ್ಪಿಸಬೇಕು. ಕಬ್ಬಿನ ತೂಕ, ಸಕ್ಕರೆ ಇಳುವರಿ ಹಾಗೂ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಕಡಿತದಲ್ಲಿ ಪಾರದರ್ಶಕತೆ ತರಬೇಕು ಎಂದು ರೈತ ಸಂಘ ಒತ್ತಾಯಿಸಿದೆ.

ಹೋರಾಟಕ್ಕೆ ಶಾಶ್ವತ ತೆರೆ ಇಲ್ಲ: ಸಚಿವರ ಭರವಸೆಯ ಹಿನ್ನೆಲೆಯಲ್ಲಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆಯೇ ಹೊರತು, ರೈತರ ಮೂಲ ಬೇಡಿಕೆಗಳನ್ನು ಕೈಬಿಟ್ಟಿಲ್ಲ. ಸರ್ಕಾರ ನಿಗದಿತ ಕಾಲಮಿತಿಯೊಳಗೆ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಮತ್ತೆ ಶಾಂತಿಯುತವಾಗಿ, ಆದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ರೈತ ಸಂಘ ಎಚ್ಚರಿಕೆ ನೀಡಿದೆ.

ಹೆಚ್ಚಿನ ಸುದ್ದಿ