KRGRV
Saturday, October 3, 2026
Homeರಾಜಕೀಯತುಂಗಭದ್ರಾ ನೀರಾವರಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಚೆಲುವರಾಯಸ್ವಾಮಿ

ತುಂಗಭದ್ರಾ ನೀರಾವರಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಚೆಲುವರಾಯಸ್ವಾಮಿ

ಬಾಕಿ ವೇತನ ಪಾವತಿ, ವೇತನ ಹೆಚ್ಚಳ ಹಾಗೂ ಉದ್ಯೋಗ ಭದ್ರತೆಗೆ ಕಾರ್ಮಿಕರ ಮನವಿ

ಬೆಂಗಳೂರು: ಅ.01 ತುಂಗಭದ್ರಾ ನೀರಾವರಿ ಯೋಜನೆಯಡಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ವಿವಿಧ ಸಮಸ್ಯೆಗಳನ್ನ ಪರಿಹರಿಸಲು ಸರ್ಕಾರ ಬದ್ಧವಾಗಿದ್ದು, ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳನ್ನ ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು.

ತುಂಗಭದ್ರಾ ನೀರಾವರಿ ಕಾರ್ಮಿಕರ ವಿವಿಧ ಸಮಸ್ಯೆಗಳ ಕುರಿತು ಸಚಿವ ಎನ್. ಚೆಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಮಾನ್ಯ ಜಲಸಂಪನ್ಮೂಲ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ , MLC ಭೋಸರಾಜು ಹಾಗೂ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

ವರ್ಷಪೂರ್ತಿ ಕೆಲಸಕ್ಕೆ ಕಾರ್ಮಿಕರ ಬೇಡಿಕೆ – ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಚಿವರು

ಸಭೆಯಲ್ಲಿ ಕಾರ್ಮಿಕರ ಪ್ರಮುಖ ಬೇಡಿಕೆಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಘದ ಪದಾಧಿಕಾರಿಗಳು, 25ರಿಂದ 30 ವರ್ಷಗಳಿಂದ ತುಂಗಭದ್ರಾ ನೀರಾವರಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು, ವರ್ಷಪೂರ್ತಿ ಕೆಲಸ ನೀಡಬೇಕು ಎಂದು ಮನವಿ ಮಾಡಿದರು. ಸುದೀರ್ಘ ಅವಧಿಯಿಂದ ಸೇವೆ ಸಲ್ಲಿಸುತ್ತಿದ್ದರೂ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವುದರಿಂದ ಕಾರ್ಮಿಕರಿಗೆ ಸೇವಾ ಭದ್ರತೆ ಇಲ್ಲದಂತಾಗಿದೆ ಎಂದು ತಿಳಿಸಿದರು.

ಇದೇ ವೇಳೆ, ಹಲವು ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಕಾರ್ಮಿಕರ ವೇತನವನ್ನ ಹೆಚ್ಚಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಲಾಯಿತು. ಪ್ರಸ್ತುತ ದೊರೆಯುತ್ತಿರುವ ವೇತನವು ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಮತ್ತೊಂದೆಡೆ, ವೇತನ ಪಾವತಿಯಲ್ಲಿ ವಿಳಂಬವಾಗುತ್ತಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಸಂಘದ ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಕಾರ್ಮಿಕರಿಗೆ PF ಹಾಗೂ ESI ಸೌಲಭ್ಯಗಳನ್ನ ಸಮರ್ಪಕವಾಗಿ ಕಲ್ಪಿಸಬೇಕು, ವೇತನವನ್ನ ನೇರವಾಗಿ ಕಾರ್ಮಿಕರ ಖಾತೆಗೆ ಪಾವತಿಸುವ ವ್ಯವಸ್ಥೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಹಲವು ವರ್ಷಗಳಿಂದ ನೀರಾವರಿ ವ್ಯವಸ್ಥೆಯ ನಿರ್ವಹಣೆ ಹಾಗೂ ಕಾಲುವೆಗಳ ಸಂರಕ್ಷಣೆಯಲ್ಲಿ ಕಾರ್ಮಿಕರು ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಬೇಡಿಕೆಗಳನ್ನ ಮಾನವೀಯ ನೆಲೆಯಲ್ಲಿ ಪರಿಗಣಿಸುವಂತೆ ಮನವಿ ಮಾಡಲಾಯಿತು.

ತುಂಗಭದ್ರಾ ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದು

ಕಾರ್ಮಿಕರ ಅಹವಾಲುಗಳನ್ನ ಆಲಿಸಿದ ಸಚಿವ ಎನ್. ಚೆಲುವರಾಯಸ್ವಾಮಿ, ಕಾರ್ಮಿಕರು ಹಲವು ವರ್ಷಗಳಿಂದ ಸಲ್ಲಿಸುತ್ತಿರುವ ಸೇವೆಯನ್ನ ಪರಿಗಣಿಸಿ ಅವರ ಸಮಸ್ಯೆಗಳನ್ನ ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಬಾಕಿ ವೇತನ ಪಾವತಿ, ವೇತನ ಹೆಚ್ಚಳ, ಉದ್ಯೋಗ ಭದ್ರತೆ ಹಾಗೂ PF–ESI ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತುಂಗಭದ್ರಾ ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ರೈತರಿಗೆ ನೀರು ತಲುಪಿಸುವ ಕಾರ್ಯದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ರಾಥೋಡ್, ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್ ರವಿ ಹಾಗೂ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ನಾಗಲಿಂಗ ಸ್ವಾಮಿ ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ